ಲೋಕಸಭಾ ಚುನಾವಣೆಯಲ್ಲಿ ಜೋಶಿಗೆ ಶೆಟ್ಟರ್ ಸವಾಲ್..? – ಏನಿದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್?

ಲೋಕಸಭಾ ಚುನಾವಣೆಯಲ್ಲಿ ಜೋಶಿಗೆ ಶೆಟ್ಟರ್ ಸವಾಲ್..? – ಏನಿದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್?

ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಕೇಂದ್ರದಿಂದ ಬಿಜೆಪಿ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರನ್ನ ಗೌರವಯುತವಾಗಿ ನಡೆಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಚುನಾವಣೆಯಲ್ಲಿ ಶೆಟ್ಟರ್​ಗೆ ಸೋಲಾದ್ರೂ ಕೂಡ ಅವರಿಂದ ಪಕ್ಷಕ್ಕೆ ಹೆಚ್ಚು ಸ್ಥಾನ ಗಳಿಸಲು ಸಹಾಯಕವಾಗಿದೆ. ಹೀಗಾಗಿ ಅವ್ರಿಗೆ ಉನ್ನತ ಹುದ್ದೆಯ ಜೊತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವ್ರನ್ನ ಕಣಕ್ಕಿಳಿಸಲು ಕೈಪಡೆ ರಣತಂತ್ರ ರೂಪಿಸುತ್ತಿದೆಯಂತೆ.

ಇದನ್ನೂ ಓದಿ : ಸಿಎಂ ಗದ್ದುಗೆಗೆ ಸಿದ್ದರಾಮಯ್ಯ – ಬಿಎಸ್​ವೈ, ರಾಮಕೃಷ್ಣ ಹೆಗಡೆಯವರ ದಾಖಲೆ ಮುರಿಯುತ್ತಾರಾ ಸಿದ್ದು?

ಕರ್ನಾಟಕದಲ್ಲಿ ಗೆಲುವಿನ ಗದ್ದುಗೆ ಏರಿದ ಕಾಂಗ್ರೆಸ್ ಈಗ ಮತ್ತೊಂದು ಕಾರ್ಯತಂತ್ರಕ್ಕೆ ಮುಂದಾಗಿದೆ.  ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿರುವ ಶೆಟ್ಟರ್ ಅವರ ಮೂಲಕ ಲಿಂಗಾಯತ ಅಸ್ತ್ರ ಬಳಸಲು ಕೈ ಪಡೆ ತಂತ್ರ ರೂಪಿಸಿದೆ. ಹೀಗಾಗಿ ಸೋತಿರುವ ಜಗದೀಶ್ ಶೆಟ್ಟರ್​ ಅವರಿಗೆ ಮಹತ್ವದ ಹುದ್ದೆ ನೀಡಲು ಕಾಂಗ್ರೆಸ್​ ಪ್ಲ್ಯಾನ್ ಮಾಡಿದೆ. ಬಿಜೆಪಿ ಟಿಕೆಟ್ ತಪ್ಪಿದ ತಕ್ಷಣ ಕಾಂಗ್ರೆಸ್‌ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿಯಿಂದ ಕಣಕ್ಕಿಳಿದಿದ್ದ ಶಿಷ್ಯ ಮಹೇಶ ಟೆಂಗಿನಕಾಯಿ ವಿರುದ್ಧ ಸೋಲುಂಡಿದ್ದಾರೆ. ಆದರೆ ಇದು ನನ್ನ ಕೊನೆಯ ಚುನಾವಣೆ ಎಂದಿದ್ದ ಶೆಟ್ಟರ್, ನನಗಿನ್ನೂ ವಯಸ್ಸಾಗಿಲ್ಲ ಎನ್ನುವ ಮೂಲಕ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

ವಿಧಾನಸಭೆಯಲ್ಲಿ ಸೋಲಾದ್ರೂ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಲು ತೆರೆಮರೆಯ ಕಸರತ್ತು ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಆಗಬಹುದೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಮೂಲೆಗಟ್ಟುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್, ಸಂತೋಷ್ ಎಂದು ಶೆಟ್ಟರ್ ನೇರ ಆರೋಪ ಮಾಡಿದ್ದರು.

ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. ಆದರೆ, ವಿನಯ್​ ಗೆಲುವು ಸಾಧಿಸಲಾಗಿರಲಿಲ್ಲ. ಜೋಶಿ ಅವರನ್ನು ಗೆಲ್ಲಿಸುವಲ್ಲಿ ಜಗದೀಶ್ ಶೆಟ್ಟರ್ ಅವರ ಪಾತ್ರವೂ ಇತ್ತು. ಈಗ ವಿನಯ್ ಕುಲಕರ್ಣಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಲ್ಹಾದ್​ ಜೋಶಿ ವಿರುದ್ಧ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್​ ಕಣಕ್ಕಿಳಿಸಿದರೂ ಅಚ್ಚರಿ ಪಡಬೇಕಿಲ್ಲ.

ವಿಧಾನಸಭಾ ಚುನಾವಣೆಯಲ್ಲಿ ಶೆಟ್ಟರ್​ ಸೋತ ಬಳಿಕ ಅವರ ನಿವಾಸಕ್ಕೆ ಕಾಂಗ್ರೆಸ್​ ಹಿರಿಯ ನಾಯಕರು ಭೇಟಿ ನೀಡಿ ಧೈರ್ಯ ಹೇಳಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ, ವಿಜಯಪುರ ಸೇರಿದಂತೆ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಇದರಿಂದ ಸೋತಿರುವ ಜಗದೀಶ್ ಶೆಟ್ಟರ್ ಅವರನ್ನು ಮುಂದಿನ ಚುನಾವಣೆಗಳಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲು ಅವರಿಗೆ ಮಹತ್ವದ ಹುದ್ದೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಹಾಗೇ ಸಿದ್ದರಾಮಯ್ಯ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್​ಗೆ ಸಚಿವ ಸಂಪುಟದ ಸ್ಥಾನಮಾನ ನೀಡುವ ಬಗ್ಗೆಯೂ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯಾಗಿದೆ. ಈಗಾಗಲೇ ಸಿದ್ದರಾಮಯ್ಯರನ್ನ ಭೇಟಿ ಮಾಡಿ ಸಿಎಂ ಆಗಿದ್ದಕ್ಕೆ ಶೆಟ್ಟರ್ ಧನ್ಯವಾದ ಸಲ್ಲಿಸಿದ್ದಾರೆ. ನಂತರ ಮಾತನಾಡಿರುವ ಶೆಟ್ಟರ್, ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದ್ರೆ, ಹೈಕಮಾಂಡ್​ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುವೆ  ಎಂದಿದ್ದಾರೆ.

suddiyaana