ಅವರೇನು ನಮ್ಮ ಹೈಕಮಾಂಡಾ? – ಬಿಜೆಪಿ ಮೇಲೆ ಸಿಎಂ ಸಿದ್ದರಾಮಯ್ಯ ಸಿಟ್ಟು

ಬಿಜೆಪಿ ನಾಯಕರ ಮೇಲೆ ಸಿಎಂ ರೊಚ್ಚಿಗೆದ್ದು ಮಾತನಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆಗುತ್ತಿದ್ದು ಈ ಬಗ್ಗ ಬಿಜೆಪಿ ಮಾತನಾಡ್ತಿದೆ. ಇದ್ದಕ್ಕೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ. ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು ಅವರು ಯಾರು? ಅವರೇನು ನಮ್ಮ ಹೈಕಮಾಂಡಾ? ಅವರ ಕೆಲಸ ಅವರು ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ ಬಗ್ಗೆ ಕೈ ನಾಯಕನಿಗೆ ಅನುಮಾನ – ಅಜಯ್ ರಾಯ್ ಹೇಳಿಕೆಗೆ ಕೆಂಡಕಾರಿದ ಬಿಜೆಪಿ
ಸಿಎಂ, ಪದೇ ಪದೆ ನಾನೇ ಸಿಎಂ ಎನ್ನುವ ಮೂಲಕ ಸಿದ್ದರಾಮಯ್ಯ ಹೈಕಮಾಂಡ್ಗೆ ಸೆಡ್ಡು ಹೊಡೆದಿದ್ದಾರೆ ಎಂಬ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.ನಮ್ಮ ಬಗ್ಗೆ ಏಕೆ ಬಿಜೆಪಿ ತಲೆಕೆಡಿಸಿಕೊಳ್ಳುತ್ತಿದೆ? ಅವರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬದಲು ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ. ನಮ್ಮ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಲು ಅವರು ಯಾರು? ಎಂದು ಪ್ರಶ್ನಿಸಿದರು.
ಇದೇ ವೇಳೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರದ ಎನ್ಡಿಆರ್ಎಫ್ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಮುಖ್ಯಮಂತ್ರಿಗಳು ನಿರಾಕರಿಸಿದರು. ಎನ್ಡಿಆರ್ಎಫ್ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಒಂದು ರೂಪಾಯಿಯನ್ನೂ ದುರುಪಯೋಗಪಡಿಸಿಕೊಂಡಿಲ್ಲ. ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ಈ ಯೋಜನೆಗಳು ಕರ್ನಾಟಕದಲ್ಲಿ ಭಾರಿ ಯಶಸ್ಸನ್ನು ಕಂಡಿವೆ, ಅದು ಅವರ ನಿದ್ದೆಗೆಡಿಸಿದೆ ಎಂದು ಹೇಳಿದರು. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ತಿಳಿಸಿದರು.

ನೋಡಿರಿ

