ಅಪಶಕುನ, ಜೇಬುಗಳ್ಳ ಎಂದು ಪ್ರಧಾನಿ ಮೋದಿ ವಿರುದ್ಧ ಹೇಳಿಕೆ – ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಾನೂನು ಸಂಕಷ್ಟಕ್ಕೆ ಗುರಿಯಾಗುತ್ತಲೇ ಇದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಮುನ್ನ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ವೇಳೆ ರಾಹುಲ್ ಗಾಂಧಿ ಮೋದಿ ಸರ್‌ನೇಮ್ ಬಗ್ಗೆ ವ್ಯಂಗ್ಯವಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಜಾಮೀನು ಮೂಲಕ ಹೊರಬಂದಿದ್ದರು. ಇದೀಗ ಪ್ರಧಾನಿ ಮೋದಿ ವಿರುದ್ಧ ಮತ್ತೊಂದು ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ನೋಟಿನ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ! – ಮತ್ತೆ ತಮಿಳುನಾಡಿಗೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ CWRC ಸೂಚನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ‘ಪನೌತಿ’, ‘ಪಿಕ್‌ಪಾಕೆಟ್’ ಮತ್ತು ಉದ್ಯಮಿಗಳ ಸಾಲ ಮನ್ನಾಗಾರ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿವಾದಕ್ಕೀಡಾಗಿದ್ದು, ಚುನಾವಣಾ ಆಯೋಗ(ಇಸಿ) ಗುರುವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶನಿವಾರ ಸಂಜೆಯೊಳಗೆ ರಾಹುಲ್ ನೋಟಿಸ್ ಗೆ ಉತ್ತರಿಸುವಂತೆ ಸೂಚಿಸಿದೆ.
ಈ ಸಂಬಂಧ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ), ಕಾಂಗ್ರೆಸ್ ಮಾಜಿ ಅಧ್ಯಕ್ಷರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಹಿರಿಯ ನಾಯಕರೊಬ್ಬರು ಇಂತಹ ಭಾಷೆಯನ್ನು ಬಳಸುವುದು “ಅಯೋಗ್ಯ” ಎಂದು ಕಿಡಿ ಕಾರಿತ್ತು. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುವುದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂದಿರುವ ಬಿಜೆಪಿ ನಾಯಕರು, ರಾಹುಲ್ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಇಸಿಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಪಿಎಂ ಎಂದರೆ ‘ಪನೌತಿ’ ಎಂದು ರಾಹುಲ್ ಗಾಂಧಿ ಹೇಳಿದ್ದರು. ಉದ್ಯಮಿ ಗೌತಮ್ ಅದಾನಿ ಅವರು ಜನರ ಜೇಬಿಗೆ ಕನ್ನಾ ಹಾಕುವಾಗ ಮೋದಿ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು. ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಮೋದಿ ದುರಾದೃಷ್ಟ ತಂದರು ಎಂದು ಹೀಗಳೆದಿದ್ದರು. ಹಿಂದಿಯ ಪನೌತಿ ಎಂಬ ಪದಕ್ಕೆ ಕನ್ನಡದಲ್ಲಿ ಅಪಶಕುನ ಎನ್ನಲಾಗುತ್ತದೆ.