ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು – ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು – ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ತೆಗೆದುಹಾಕಿತ್ತು. ಈ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಸೋಮವಾರ ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು, ಹಲವು ಕಡೆ ಬಿಗಿ ಭದ್ರತೆ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು2019 ರಲ್ಲಿ ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯ ವಿಚಾರಣೆ ನಡೆದಿದ್ದು, ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸಿದೆ. ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್‌ 30ರ ಒಳಗಡೆ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.

ತೀರ್ಪು ಓದಿದ ಸಿಜೆಐ ಚಂದ್ರಚೂಡ್‌ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Shwetha M