ಸ್ಯಾಂಡಲ್‌ವುಡ್‌ನಲ್ಲಿ ‘ಡೇರ್‌ಡೆವಿಲ್ ಮುಸ್ತಾಫಾ’ ಹವಾ – ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಸ್ಯಾಂಡಲ್‌ವುಡ್‌ನಲ್ಲಿ ‘ಡೇರ್‌ಡೆವಿಲ್ ಮುಸ್ತಾಫಾ’ ಹವಾ – ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಸ್ಯಾಂಡಲ್‌ವುಡ್‌ನಲ್ಲಿ ‘ಡೇರ್‌ಡೆವಿಲ್ ಮುಸ್ತಾಫಾ’ ಹವಾ ಜೋರಾಗಿದೆ. ಇತ್ತೀಚೆಗೆ 25 ದಿನಗಳನ್ನು ಪೂರೈಸಿದ ‘ಡೇರ್‌ಡೆವಿಲ್ ಮುಸ್ತಾಫಾ’ ಸಿನಿಮಾ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಇದೀಗ ಸಾಹಿತ್ಯ ಆಸಕ್ತರು ಹಾಗೂ ಸಿನಿಪ್ರಿಯರ ಗಮನ ಸೆಳೆದ  ‘ಡೇರ್‌ಡೆವಿಲ್ ಮುಸ್ತಾಫಾ’ನಿಗೆ ತೆರಿಗೆ ವಿನಾಯಿತಿ ಕೂಡಾ ಸಿಕ್ಕಿದೆ. ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:50ನೇ ವಯಸ್ಸಿನಲ್ಲಿ ಮತ್ತೆ ತಂದೆಯಾದ ಪ್ರಭುದೇವ – ಎರಡನೇ ಪತ್ನಿ ಹಿಮಾನಿಗೆ ಹೆಣ್ಣು ಮಗು

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರವನ್ನು ಸಿನಿಮಾ ಪ್ರೇಮಿಗಳು ಮಾತ್ರವಲ್ಲ. ಅನೇಕ ಗಣ್ಯರು ಕೂಡಾ ನೋಡಿ ಮೆಚ್ಚಿಕೊಂಡಿದ್ದಾರೆ. ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಸ್ಯಾಂಡಲ್‌ವುಡ್‌ನಲ್ಲಿ ಉತ್ತಮ ರೀತಿಯಲ್ಲಿ ಪ್ರದರ್ಶನ ಕಾಣುತ್ತಿರುವಾಗ ತೆರಿಗೆ ವಿನಾಯಿತಿ ಸಿಕ್ಕಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಶಶಾಂಕ್ ಸೋಗಾಲ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಿಶಿರ್ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್ ಭಾರದ್ವಾಜ್, ಆಶಿತ್ ಶ್ರೀವತ್ಸಾ, ಅಭಯ್, ಮಂಡ್ಯ ರಮೇಶ್, ಉಮೇಶ್, ಪ್ರೇರಣಾ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಧರ್ಮ ಸಹಿಷ್ಣುತೆ, ಸಹಬಾಳ್ವೆ, ಸಮಭಾವದ ಪಾಠ ಹೇಳುವ ‘ಡೇರ್‌ಡೆವಿಲ್ ಮುಸ್ತಾಫಾ’ ಸಿನಿಮಾವನ್ನು ಇನ್ನೂ ಹೆಚ್ಚಿನ ಮಂದಿಗೆ ತೋರಿಸುವ ಇಚ್ಛೆಯಿಂದ ತೆರಿಗೆ ವಿನಾಯಿತಿ ನೀಡಬೇಕೆಂದು ಸಿನಿಮಾದ ನಿರ್ದೇಶಕ ಶಶಾಂಕ್ ಸೋಗಾಲ್ ಹಾಗೂ ಸಿನಿಮಾವನ್ನು ವೀಕ್ಷಿಸಿ ಮೆಚ್ಚಿದ ಕೆಲ ಹಿರಿಯರು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಸಿಎಂ ನಿವಾಸದ ಬಳಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೋಮು ಸಾಮರಸ್ಯ ಸಾರುವ ತಮ್ಮ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೋರಿಕೊಂಡಿದ್ದರು. ಈ ಮನವಿಗೆ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ‘ತೇಜಸ್ವಿಯವರ ಓದುಗರು, ಅಭಿಮಾನಿಗಳು, ತೇಜಸ್ವಿಯವರ ಕುಟುಂಬ ವರ್ಗ ಈ ಸಿನಿಮಾವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಕರ್ನಾಟಕ ರಾಜ್ಯವು ಸರ್ವಜನಾಂಗದ ಶಾಂತಿಯ ತೋಟವಾಗಲು ಇಂತಹ ಸಿನಿಮಾಗಳು ಜನರಿಗೆ ಹೆಚ್ಚುಹೆಚ್ಚು ತಲುಪಬೇಕು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ತಾವು ಸಾಧ್ಯವಾದಲ್ಲಿ ಬಿಡುವು ಮಾಡಿಕೊಂಡು ಈ ಸಿನಿಮಾ ನೋಡಬೇಕೆಂದು ವಿನಂತಿಸಿಕೊಳ್ಳುತೇವೆ. ಇನ್ನಷ್ಟು ಜನರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ಸಿನಿಮಾ ನೋಡಲು ಅನುಕೂಲವಾಗುವಂತೆ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂದು ಮನವಿ ಮಾಡುತ್ತೇವೆ’ ಎಂದು ಪತ್ರದಲ್ಲಿ ಬರೆಯಲಾಗಿತ್ತು.

suddiyaana