ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಟೆಸ್ಟ್ ತಂಡ ಪ್ರಕಟ – ಗಿಲ್ ಕ್ಯಾಪ್ಟನ್, ರಿಷಭ್ ಪಂತ್ ಔಟ್

ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ತಂಡ ಪ್ರಕಟವಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ಟೆಸ್ಟ್ ಪಂದ್ಯಗಳು ನಡೆಯಲಿವೆ.
ಇದನ್ನೂ ಓದಿ: ಏಷ್ಯಾಕಪ್ ಫೈನಲ್ ಪ್ರವೇಶಿಸಿದ ಭಾರತ – ಬಾಂಗ್ಲಾ ಬೌಲರ್‌ಗಳ ಬೆವರಿಳಿಸಿದ ಅಭಿಷೇಕ್ ಶರ್ಮಾ
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಕ್ಕೆ ಶುಭ್ಮನ್ ಗಿಲ್ ಸಾರಥಿ. ಉಪನಾಯಕನಾಗಿ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ. ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್. ಜಗದೀಸನ್ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ವಿಂಡೀಸ್ ಸರಣಿಯಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕವು ಶುಭ್ಮನ್ ಗಿಲ್ಗೆ ಫಿಕ್ಸ್. ಐದನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಾಣಿಸಿಕೊಂಡರೆ, ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ತಂಡದಲ್ಲಿದ್ದಾರೆ.
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ನೋಡಿರಿ

