ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದು ಬೀಗಿದ ಟೀಮ್ ಇಂಡಿಯಾ – ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಂಡಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. 2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಶ್ರೀಲಂಕಾ ತಂಡ ಈ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ. ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿಯ ಫೈನಲ್‌ನಲ್ಲಿ ಗಿಲ್ ಆಡೋದು ಡೌಟ್
ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 19 ರನ್‌ಗಳಿಂದ ಸೋಲುಣಿಸುವ ಮೂಲಕ ಭಾರತೀಯ ವನಿತೆಯರು ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ. ಯುವ ಸ್ಪೋಟಕ ಆಟಗಾರ್ತಿ ಶಫಾಲಿ ವರ್ಮಾ ಕೇವಲ 9 ರನ್ ಗಳಿಸಿ ನಿರ್ಗಮಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೋಡ್ರಿಗಸ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಮೂರನೇ ವಿಕೆಟ್‌ಗೆ 73 ರನ್‌ಗಳ ಜೊತೆಯಾಟವಾಡಿದ ಬಳಿಕ ಸ್ಮೃತಿ ಮಂಧಾನ (46) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ವಿಕೆಟ್ ಕೀಪರ್ ರಿಚಾ ಘೋಷ್ (9) ಕೂಡ ಔಟಾದರು. ಇನ್ನು ನಾಯಕಿ ಹರ್ಮನ್ ಪ್ರೀತ್ ಕೌರ್ ಕೇವಲ 2 ರನ್ ಗಳಿಸಿ ನಿರ್ಗಮಿಸಿದರು. ದಿಢೀರ್ ಕುಸಿತಕ್ಕೊಳಾದ ತಂಡಕ್ಕೆ ಎಚ್ಚರಿಕೆಯ ಬ್ಯಾಟಿಂಗ್ ಮೂಲಕ ಜೆಮಿಮಾ ಆಸರೆಯಾದರು. ಅಲ್ಲದೆ ತಂಡದ ಮೊತ್ತವನ್ನು 100 ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 7 ವಿಕೆಟ್ ನಷ್ಟಕ್ಕೆ 20 ಓವರ್‌ಗಳಲ್ಲಿ 116 ರನ್ ಕಲೆಹಾಕಿತು. 117 ರನ್‌ಗಳ ಸುಲಭ ಗುರಿ ಬೆನ್ನತ್ತದ ಶ್ರೀಲಂಕಾ ತಂಡವನ್ನು ಟೀಮ್ ಇಂಡಿಯಾ ಬೌಲರ್‌ಗಳು ನಿಯಂತ್ರಿಸಿದರು. ಈ ಮೂಲಕ ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ 16 ರನ್‌ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತೀಯ ವನಿತೆಯರು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಅತ್ತ ರನ್ನರ್ ಅಪ್ ಆಗಿ ಶ್ರೀಲಂಕಾ ತಂಡ ಬೆಳ್ಳಿ ಪದಕ ಗೆದ್ದರೆ, 3ನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ್ ಮಹಿಳಾ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದೆ.