ನಾಳೆ ಸಾರಿಗೆ ನೌಕರರ ಪ್ರತಿಭಟನೆ – ಬಸ್ ಗಳ ಸಂಚಾರ ಇರುತ್ತೋ, ಇಲ್ವೋ?

ನಾಳೆ ಸಾರಿಗೆ ನೌಕರರ ಪ್ರತಿಭಟನೆ – ಬಸ್ ಗಳ ಸಂಚಾರ ಇರುತ್ತೋ, ಇಲ್ವೋ?

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದು, ಜನವರಿ 24 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವ್ಯಾಪ್ತಿಯಲ್ಲಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ವಿಧಾನಸೌಧದ ಗೋಡೆಗೆ ಕಿವಿ ಇಟ್ರೆ ಲಂಚ ಲಂಚ ಅನ್ನುತ್ತೆ’ – ಬಿಜೆಪಿಗೆ ಸಿದ್ದು ಸಖತ್ ಟಾಂಗ್!

ವೇತನ ಹೆಚ್ಚಳ, ವಜಾಗೊಂಡ ನೌಕರರನ್ನು ಮರುಸೇರ್ಪಡೆಗೊಳಿಸುವುದು ಮತ್ತು ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಎಸ್‌ಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ನೌಕರರು ಜನವರಿ 24 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಹಾಗೂ ಇತರೆ ಸಂಘಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ಆದರೆ, ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಚೇರಿಗಳ ಮುಂದೆ ಧರಣಿ ನಡೆಸಲು ಕರೆ ನೀಡಿವೆ. ಆದರೆ ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ ಸೇವೆ ಎಂದಿನಂತೆ ಯಥಾಸ್ಥಿತಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.

4 ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗೆ ಕರೆ ನೀಡಿರುವ ಸಾರಿಗೆ ನೌಕರರು  ಈಗಾಗಲೇ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು.‌ ಈ ನಿಟ್ಟಿನಲ್ಲಿ ನಾಲ್ಕು ನಿಗಮಗಳು ಮಾಹಿತಿ ನೀಡಿವೆ.

suddiyaana