ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ – ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತಿವೆ. ಹೀಗಾಗಿ ಭಿನ್ನಮತ, ಅಸಮಾಧಾನಗಳು ಸ್ಫೋಟಗೊಳ್ಳುತ್ತಿದ್ದು, ಕೆಲ ನಾಯಕರು ಪಕ್ಷಾಂತರ ಪರ್ವವನ್ನೂ ಮುಂದುವರೆಸುತ್ತಿದ್ದಾರೆ. ಇದೀಗ ಹಾವೇರಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಎಂ.ಎಂ ಹಿರೇಮಠ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ ಒಳಮೀಸಲಾತಿ ಕಿಡಿ – ಬಂಜಾರ ಸಮುದಾಯದ ಸಿಟ್ಟು ಸ್ಫೋಟ!
‘ಇಲ್ಲಿಯವರೆಗೂ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ. ಆದರೆ ಕಳೆದ ಕೆಲವು ದಿನಗಳಿಂದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಇದನ್ನು ಅಂಗೀಕರಿಸಬೇಕು ಅಂತಾ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. ಹಿರೇಮಠ ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ರವಾನಿಸಿದ್ದಾರೆ.
ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಎಂ.ಎಂ.ಹಿರೇಮಠ ಅವರು ರುದ್ರಪ್ಪ ಲಮಾಣಿಯನ್ನು ಹೊರತುಪಡಿಸಿ ಬೇರೆಯಾರಿಗಾದರೂ ಟಿಕೆಟ್ ಕೊಡಿ ಎಂದು ರಾಜ್ಯ ಕೈ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೇ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಕೂಡ ಸಿದ್ದ ಮಾಡಿಕೊಂಡಿದ್ದರು. ಆದರೆ ಹಾವೇರಿ ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಘೋಷಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಹಿರೇಮಠ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.