200ಕ್ಕೂ ಹೆಚ್ಚು ರೈತರನ್ನ ಬಲಿ ಪಡೆದಿದ್ದೇ ನಿಮ್ಮ ಕೊಡುಗೆ – ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಗುಡುಗು

200ಕ್ಕೂ ಹೆಚ್ಚು ರೈತರನ್ನ ಬಲಿ ಪಡೆದಿದ್ದೇ ನಿಮ್ಮ ಕೊಡುಗೆ –  ಸಿಎಂ ಸಿದ್ದರಾಮಯ್ಯ ವಿರುದ್ಧ  ಹೆಚ್‌ಡಿಕೆ ಗುಡುಗು

 ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯಮೇಲೆ ವಾಗ್ದಾಳಿ ನಡೆಸಿದ್ದಾರೆ.  ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ ಉಳಿಯಿತು. ಇದು ನಿಮಗೆ ಗೊತ್ತಿರಲಿ ಎಂದು ಸಿಎಂ ಗೆ ಕೇಂದ್ರ ಸಚಿವರಾದ ಹೆಚ್‌ಡಿಕೆ ಗುಡುಗಿದ್ದಾರೆ.

ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಹೆಚ್‌ಡಿಕೆ,  ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.  ಕೇಂದ್ರ ಸಚಿವರು, ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ರೈತರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನು ನೋಡಿ. ಪ್ರವಾಹ, ಮಳೆಯಲ್ಲಿ ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದರೆ ನೀವು ಮೋಜು ಮಸ್ತಿ ಮಾಡುತ್ತಿದ್ದೀರಿ. ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆಗಾರರ ಪರಿಸ್ಥಿತಿ ಏನಾಗಿದೆ? ತೊಗರಿ ದರ ಕುಸಿದಿದೆ. ಅದಕ್ಕೆ ಏನು ಮಾಡಿದ್ದೀರಿ? ಈವರೆಗೆ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಸರಿಯಾದ ಸಮಯದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ರೈತರ ನೆರವಿಗೆ ಬರಬೇಕಿತ್ತು, ಬಂದಿಲ್ಲ ಯಾಕೆ? ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಶೀಲನಾ ತಂಡ ಕಳುಹಿಸಿ ಎನ್ನುತ್ತಾರೆ. ನಾಲ್ಕು ತಿಂಗಳ ಬಳಿಕ ಇವರಿಗೆ ಜ್ಞಾನೋದಯ ಆಗಿದೆ. ಈಗ ಕೇಂದ್ರ ತಂಡ ರಾಜ್ಯಕ್ಕೆ ಬಂದರೆ ಏನು ವರದಿ ಕೊಡುತ್ತಾರೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಗಂಭೀರ್ ಗೆ ಗೊತ್ತಾಯ್ತಾ RO-KO ಗತ್ತು – ಯಂಗ್ ಸ್ಟರ್ಸ್ FORMULA ಫ್ಲಾಪ್!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ʼನೀರಿನ ಹೆಜ್ಜೆʼ ಪುಸ್ತಕದ ಬಗ್ಗೆ ಪ್ರತಿಕ್ರಿಯಿಸಿದ ಎಚ್‌.ಡಿ. ಕುಮಾರಸ್ವಾಮಿ, ಯಾರೋ ಬರೆದಿರುವ ಆ ಪುಸ್ತಕ ಕೇವಲ ಕಟ್ ಅಂಡ್ ಪೇಸ್ಟ್ ಅಷ್ಟೇ. ಬೇರೆ ಯಾವುದೋ ಪುಸ್ತಕದಲ್ಲಿ ಬರೆದಿರುವುದನ್ನೇ ಕತ್ತರಿಸಿ ಈ ಪುಸ್ತಕದಲ್ಲಿ ಅಂಟಿಸಿದ್ದಾರೆ! ನನಗೆ ಈ ಪುಸ್ತಕವನ್ನು ಯಾರೋ ತಂದುಕೊಟ್ಟರು. ಸಾಮಾನ್ಯವಾಗಿ ಯಾವುದೇ ಪುಸ್ತಕವಾದರೂ ಅದನ್ನು ಆಸಕ್ತಿಯಿಂದ ಓದುತ್ತೇನೆ. ಆದರೆ, ಈ ಪುಸ್ತಕ ನೋಡಿದಾಗ ಇಲ್ಲಿರುವುದು ಅವರ ಹೆಜ್ಜೆಗಳಲ್ಲ, ಯಾರದೋ ಹೆಜ್ಜೆಗಳನ್ನು ನನ್ನ ಹೆಜ್ಜೆಗಳು ಎಂದು ತೋರಿಸುವ ಕಸರತ್ತು ಮಾಡಿದ್ದಾರೆ ಎಂದು ಆರೋಪಿಸಿದರು.

Kishor KV