ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ – ಜ.5ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪರಿಶೀಲನೆ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಕೇಂದ್ರಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದ್ರಿಂದಾಗಿ ಬೆಂಗಳೂರು ಮತ್ತು ಮೈಸೂರು ಪ್ರಯಾಣ ಇನ್ನಷ್ಟೂ ಹತ್ತಿರವಾಗಲಿದೆ. ಇದೀಗ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜನವರಿ 5ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಮಾಹಿತಿ ನೀಡಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಲೇನ್ ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ದೂರು ಕೇಳಿಬರುತ್ತಿದೆ. ಪೊಲೀಸ್ ಇಲಾಖೆಯ ಪ್ರಕಾರ, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಳೆದ 6 ತಿಂಗಳಲ್ಲಿ 77 ಅಪಘಾತಗಳು ಉಂಟಾಗಿವೆ. ಈ ಅಪಘಾತಗಳಲ್ಲಿ ಒಟ್ಟು 28 ಜನರು ಪ್ರಾಣ ಕಳೆದುಕೊಂಡಿದ್ದು, 67 ಜನರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಸಿಗುತ್ತಿಲ್ಲ – ಇದೇನಾ ಸರ್ಕಾರದ ಮುಂಜಾಗ್ರತಾ ಕ್ರಮ..?
ಬುಧವಾರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವ ಸಿಸಿ ಪಾಟೀಲ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. 8,453 ಕೋಟಿ ರೂ. ವೆಚ್ಚದ ಈ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಆದರೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಚಲಾಯಿಸಲು ಅನುಮತಿ ನೀಡಿದ್ದು, ಉಳಿದ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಗೂ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ.