ಬೆಂಗಳೂರಿನ ವಿವಿಧೆಡೆ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ!
ಬೆಂಗಳೂರು: ರಾಜ್ಯದಲ್ಲಿ ಬರದ ಛಾಯೆ ಇರುವ ಹೊತ್ತಲ್ಲೇ ಮುಂದಿನ 15 ದಿನಗಳವರೆಗೆ ಪತಿನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಬಿಡಬ್ಲ್ಯುಎಸ್‌ಎಸ್‌ಬಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದೆ. ಇಂದು (ಶನಿವಾರ) ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬರದ ಛಾಯೆ – ಸರಳ ಮತ್ತು ಅರ್ಥಪೂರ್ಣ ದಸರಾ ಆಚರಣೆಗೆ ಸರ್ಕಾರ ನಿರ್ಧಾರ
ಬಿಡಬ್ಲ್ಯುಎಸ್‌ಎಸ್‌ಬಿ ಈ ಬಗ್ಗೆ ಮಾಹಿತಿ ನೀಡಿದ್ದು, ತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಮಾಹಿತಿ ನೀಡಿದೆ.
ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಕಾರಣಕ್ಕೆ ಸೆಪ್ಟಂಬರ್ 23ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 2 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಬೆಂಗಳೂರಿನ ನಾಗರಿಕರು/ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವ ಜೊತೆಗೆ ಅಗತ್ಯ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.