ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ – ಮೊದಲ ಪಟ್ಟಿಯಲ್ಲಿ ಯಾರಿಗೆಲ್ಲಾ ಸಿಕ್ಕಿದೆ ಟಿಕೆಟ್..?
ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ಕ್ಷಣಕ್ಷಣಕ್ಕೂ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಲ್ಲಿ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಈಗಾಗ್ಲೇ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ರಿಲೀಸ್ ಮಾಡಿತ್ತು. ಇದೀಗ ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ರೆಡಿ ಮಾಡಿದ್ದು ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಭಾಗವಹಿಸಿದ್ದಾರೆ. ಹಾಗೇ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ, ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಎಂಬಿ ಪಾಟೀಲ್, ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ನ 135 ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ಲೀಕ್ – ಯಾರಿಗೆಲ್ಲಾ ಅವಕಾಶ ಸಿಕ್ಕಿದೆ ಗೊತ್ತಾ..?
ಸ್ಕ್ರೀನಿಂಗ್ ಕಮಿಟಿ ಚರ್ಚೆಯ ಬಳಿಕ ಇದೀಗ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಟಿಕೆಟ್ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಸಭೆಯಲ್ಲಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಬಹುತೇಕ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ. ಮೂಲಗಳ ಪ್ರಕಾರ 120 ಅಭ್ಯರ್ಥಿಗಳ ಹೆಸರುಗಳನ್ನು ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಉಳಿದ ಹೆಸರುಗಳನ್ನು ಎರಡನೇ ಹಂತದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಕೆಲವು ಕ್ಷೇತ್ರಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಆಕಾಂಕ್ಷಿಗಳು ಇರುವ ಕಾರಣದಿಂದಾಗಿ ಟಿಕೆಟ್ ಘೋಷಣೆ ಪ್ರಕ್ರಿಯೆ ಜಟಿಲಗೊಂಡಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಚರ್ಚೆ ನಡೆಯಲಿದೆ. ಟಿಕೆಟ್‌ಗಾಗಿ ಸಮುದಾಯವಾರು ಬೇಡಿಕೆಗಳು ಕೂಡಾ ಇದ್ದು, ಈ ವಿಚಾರವಾಗಿಯೂ ಅಳೆದು ತೂಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮತ್ತೊಂದೆಡೆ ಈ ಬಾರಿ ಲಿಂಗಾಯತರು 68 ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದಾರೆ. ಕುರುಬರು 40, ಮುಸ್ಲಿಮರು 28 ಟಿಕೆಟ್ ನೀಡಬೇಕು ಎಂಬ ಬೇಡಿಕೆಯನ್ನು ಪಕ್ಷದ ನಾಯಕರ ಮುಂದೆ ಇಟ್ಟಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆ ನಡೆದ ಬಳಿಕ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ. ಮಾರ್ಚ್ 20ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ರಾಹುಲ್ ರಾಜ್ಯ ಪ್ರವಾಸದ ನಂತರದಲ್ಲಿ ಟಿಕೆಟ್ ಘೋಷಣೆ ಆಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಟಿಕೆಟ್ ಘೋಷಣೆ ಮಾಡಿದರೆ ಬಂಡಾಯದ ಬಿಸಿ ಏರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಗಿದ ಬೆನ್ನಲ್ಲೇ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಟ್ಟಾರೆ ಇವತ್ತು ದೆಹಲಿಯಲ್ಲಿ ಸಭೆ ನಡೆದಿದ್ದು ಯಾವುದೇ ಕ್ಷಣದಲ್ಲಾದ್ರೂ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ.