ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ – ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ – ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಸರ್ಕಾರವು ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಅಜಾತಶತ್ರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ

ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ಅಂತ್ಯಕ್ರಿಯೆ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಅವರ ಇಷ್ಟದ ಕಾಫಿ ಡೇ ಆವರಣದಲ್ಲೇ ಅಂತ್ಯಸಂಸ್ಕಾರ ನಡೆಯಲಿದೆ. ವಿದೇಶದಿಂದ ಸಂಬಂಧಿಕರು ಬರಬೇಕಿರುವ ಕಾರಣ ನಾಳೆ ಅಂತ್ಯಕ್ರಿಯೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಅಪಾರ. ಅವರ ಸಾಧನೆಗಳು ಮತ್ತು ನಾಯಕತ್ವ ಗುಣಗಳು ಯುವ ರಾಜಕಾರಣಿಗಳಿಗೆ ಮಾದರಿಯಾಗಿವೆ. ಕೇಂದ್ರ ಸಚಿವ ಎಸ್.ಎಂ. ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. “ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. “ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ ಸಿಎಂ ಸಿದ್ದರಾಮಯ್ಯ.

Sulekha

Leave a Reply

Your email address will not be published. Required fields are marked *