ಶೆಫಾಲಿ ವರ್ಮಾ ಸ್ಫೋಟಕ ಬ್ಯಾಟಿಂಗ್- ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ಗೆ ಲಗ್ಗೆ
ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ. ಟೀಂ ಇಂಡಿಯಾ ತನ್ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನೇಪಾಳ ತಂಡವನ್ನು ಮಣಿಸಿ ಸೆಮಿಫೈನಲ್ ಸುತ್ತಿಗೆ ಎಂಟ್ರಿಕೊಟ್ಟಿದೆ. ಲೀಗ್ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಹರ್ಮನ್ಪ್ರೀತ್ ಕೌರ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಈ ಮೂಲಕ ಪಾಕಿಸ್ತಾನ ಕೂಡ ಗುಂಪಿನಲ್ಲಿ ಎರಡನೇ ತಂಡವಾಗಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.
ಇದನ್ನೂ ಓದಿ: ಇಂಗ್ಲೆಂಡ್ ಕೀಪರ್ Loves ಆಸೀಸ್ ಬೌಲರ್ – ಕ್ರಿಕೆಟ್ ಆಟಗಾರ್ತಿಯರ ಸಲಿಂಗ ಪ್ರೀತಿ
ನೇಪಾಳ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಸ್ಫೋಟಕ ಇನ್ನಿಂಗ್ಸ್ ಕಟ್ಟುವ ಮೂಲಕ ಶೈನ್ ಆಗಿದ್ದಾರೆ. ಶೆಫಾಲಿ ವರ್ಮಾ 48 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 81 ರನ್ ಗಳಿಸಿ ಮಿಂಚಿದ್ದಾರೆ. ಶೆಫಾಲಿ ವರ್ಮಾ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು, ಟೀಮ್ ಇಂಡಿಯಾ ಸೆಮಿಫೈನಲ್ಗೆ ಎಂಟ್ರಿಯಾಗಲು ಪ್ರಮುಖ ಕಾರಣರಾದರು.
ಟೀಮ್ ಇಂಡಿಯಾ ಮಹಿಳಾ ಮಣಿಗಳ ಬೊಂಬಾಟ್ ಬ್ಯಾಟಿಂಗ್ನಿಂದಾಗಿ ನೇಪಾಳಿ ಮಹಿಳಾ ಬೌಲರ್ಸ್ ಸುಸ್ತಾಗಿ ಹೋದ್ರು. ಬೌಲಿಂಗ್ ಬಳಿಕ ಬ್ಯಾಟಿಂಗ್ನಲ್ಲೂ ನೇಪಾಳ ಟೀಮ್ ಸೋತು ಸುಣ್ಣವಾಯಿತು. 179 ರನ್ಗಳ ಗುರಿಗೆ ಉತ್ತರವಾಗಿ ನೇಪಾಳ ತಂಡ 20 ಓವರ್ಗಳಲ್ಲಿ 9 ವಿಕೆಟ್ಗೆ 96 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಬೌಲಿಂಗ್ನಲ್ಲಿ ಕಮಾಲ್ ಮಾಡಿದ ದೀಪ್ತಿ ಶರ್ಮಾ 4 ಓವರ್ಗಳಲ್ಲಿ 13 ರನ್ ನೀಡಿ 3 ವಿಕೆಟ್ ಪಡೆದರು. ಅದೇ ಸಮಯದಲ್ಲಿ ಅರುಂಧತಿ ರೆಡ್ಡಿ ಮತ್ತು ರಾಧಾ ಯಾದವ್ ತಲಾ 2 ವಿಕೆಟ್ ಪಡೆದರು.